ಸಿಎಂ ಭಾಷಣದ ವೇಳೆ ಕಪ್ಪು ಪಟ್ಟಿ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತೆಯರಿಗೆ ಜಾಮೀನು ಮಂಜೂರು

ಬೆಳಗಾವಿ : ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಇಂದು ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ನ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವಾಗ ಸಿಎಂ ಸಿದ್ದರಾಮಯ್ಯ ಅವರ ಭಾಷಣದ ವೇಳೆ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶನ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಕೋರ್ಟ್ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತೆಯರು ಸಿಎಂ ವಿರುದ್ಧ ಗೋ..ಗೋ. ಪಾಕಿಸ್ತಾನ ಎಂದು ಘೋಷಣೆ ಕೂಗಿ ಗಲಾಟೆ ಮಾಡಿದ್ದರಿಂದ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ಬೆಳಗಾವಿಯ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀಶೆ ಸ್ಪರ್ಷಾ ಡಿಸೋಜಾ ಅವರು, ಒಂದು ಎಕರೆ ಜಮೀನು ಶೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಸಿಎಂ ವಿರುದ್ಧ ಘೋಷಣೆ ಕೂಗಿದ್ದ ಕಾರ್ಯಕರ್ತರೆಯರನ್ನು ಬಂಧಿಸಿದ ಬಳಿಕ ಟಿಳಕವಾಡಿ ಸಿಪಿಐ ಪರುಶರಾಮ ಪೂಜಾರಿ ಮತ್ತು ಕ್ಯಾಂಪ್ ಪಿಎಸ್‌ಐ ರುಕ್ಕಿಣಿ ಅವರ ನೇತೃತ್ವದಲ್ಲಿ ಬೆಳಗಾವಿಯ ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು.



