Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದಿಂದ ಮೊಟಕುಗೊಂಡಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ “ಗಾಂಧಿ ಭಾರತ’ಕ್ಕೆ ಮರು ಚಾಲನೆ ನೀಡಲು ಮುಂದಾಗಿರುವ ಕಾಂಗ್ರೆಸ್, ಇದೇ ಜ. 21ರಂದು ಅದ್ಧೂರಿಯಾಗಿ ಈ ಸಮಾವೇಶ ನಡೆಸಲು ತೀರ್ಮಾನಿಸಿದ್ದು ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದೆ.
ಈ ಮೊದಲೇ ನಿಗದಿಯಾದಂತೆ ಜ. 21ರ ಬೆಳಗ್ಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣಗೊಳ್ಳಲಿದೆ. ಪಕ್ಷಭೇದ ಮರೆತು ಎಲ್ಲ ಶಾಸಕರಿಗೂ ಆಹ್ವಾನ ನೀಡಲು ನಿರ್ಧರಿಸಲಾಗಿದೆ. ಅನಂತರ ಕುಂದಾನಗರಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಕಾರ್ಯಕ್ರಮದ ಸಿದ್ಧತೆಗೆ ಸಂಬಂಧಿಸಿ ಜ.13ರಂದು ಬೆಳಗ್ಗೆ 11ಕ್ಕೆ ಪಕ್ಷದ ಸಭೆ ಕರೆಯಲಾಗಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಸುಜೇìವಾಲ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲ ಪದಾಧಿಕಾರಿಗಳು, ಬ್ಲಾಕ್ ಹಾಗೂ ಜಿಲ್ಲಾಧ್ಯಕ್ಷರು, ಶಾಸಕರು, ವಿವಿಧ ಘಟಕಗಳ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಲಿದ್ದು, ಸಂಜೆ 6ಕ್ಕೆ ಮುಖ್ಯಮಂತ್ರಿಗಳು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
15, 16ಕ್ಕೆ ಪಕ್ಷ ಸಂಘಟನೆಗೆ ಸಭೆ
ಜ.15 ಹಾಗೂ 16ರಂದು ಎಲ್ಲ ಶಾಸಕರು, ಪರಾಜಿತ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಪೂರ್ವಭಾವಿ ಸಭೆ ನಡೆಸಬೇಕು. ಈ ಸಭೆಯಲ್ಲಿ ಸಂಬಂಧಪಟ್ಟ ಎಲ್ಲ ಪದಾಧಿಕಾರಿಗಳು, ಉಸ್ತುವಾರಿ ಹಾಗೂ ವೀಕ್ಷಕರು ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಸಚಿವರು, ಶಾಸಕರು. ಪರಿಷತ್ತಿನ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು ತಮ್ಮ ಜವಾಬ್ದಾರಿ ಮುಂದುವರಿಸಲು ಸೂಚಿಸಲಾಗಿದೆ ಎಂದರು.
ಪಕ್ಷದ ಆಚಾರ-ವಿಚಾರ ಪ್ರಚಾರಕ್ಕೆ ಸಿಎಲ್‌ಪಿ
ಶಾಸಕಾಂಗ ಪಕ್ಷದ ಸಭೆ ಕರೆದಿರುವುದೇಕೆ ಎಂದು ಕೇಳಿದಾಗ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಗಾಂಧೀಜಿ ಅವರ ಮೌಲ್ಯಗಳನ್ನು ಉಳಿಸಲು, ಗಾಂಧಿ, ಅಂಬೇಡ್ಕರ್ ಅವರ ಮೌಲ್ಯಗಳು, ಸಂವಿಧಾನ ರಕ್ಷಣೆ ಮಾಡಬೇಕಲ್ಲವೇ? ಅದಕ್ಕಾಗಿ ನಮ್ಮ ಪಕ್ಷದ ಆಚಾರ ವಿಚಾರ ಪ್ರಚಾರ ಮಾಡಬೇಕಿದೆ. ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ ಭಾಗವಹಿಸುತ್ತಾರಾ ಎಂದಾಗ, ಯಾರೆಲ್ಲಾ ಆಗಮಿಸಲಿದ್ದಾರೆ ಎಂಬುದರ ಬಗ್ಗೆ “ದಿಲ್ಲಿಯಿಂದಲೇ ಪಟ್ಟಿ ಬರಲಿದೆ. ಅನಂತರ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದರು.



