ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮೈಕ್ರೋ ಫೈನಾನ್ಸಿಯರ್ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಪರಿಷತ್ನಲ್ಲಿ ಘೋಷಿಸಿದ್ದಾರೆ.
ಸಾಲಬಾಧೆಗೆ ತತ್ತರಿಸಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮಾದರಿಯಲ್ಲೇ ಮೈಕ್ರೋ ಫೈನಾನ್ಸ್ಗಳ ಹಾವಳಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಗಳ ಕುಟುಂಬಕ್ಕೂ 5 ಲಕ್ಷ ರೂ ನೀಡಲಾಗುವುದು. ಆತ್ಮಹತ್ಯೆ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದೇ ನಮ್ಮ ಉದ್ದೇಶ. ಈ ಬಗ್ಗೆ ಹಣಕಾಸು ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಸದಸ್ಯ ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಸಿಎಂ ಉತ್ತರಿಸಿದರು.
ರಾಜ್ಯದ ಗ್ರಾಮೀಣ ಭಾಗದಲ್ಲಿ ಜನರು ಮೈಕ್ರೋ ಫೈನಾನ್ಸಿಯರ್ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಿ 2024ರಲ್ಲಿ ಸುಗ್ರೀವಾಜ್ಞೆ ತಂದು ಕರ್ನಾಟಕ ಕಿರುಸಾಲ ಹಾಗೂ ಸಣ್ಣಸಾಲ ಕಾಯ್ದೆ ಜಾರಿ ಮಾಡಿದ ಬಳಿಕ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಾನೂನು ಜಾರಿಗೆ ಮುನ್ನ 2023ರಲ್ಲಿ 8 ಮಂದಿ 2024ರಲ್ಲಿ 6 ಮಂದಿ ಮೃತರಾಗಿದ್ದರು. 2025ರ ಫೆಬ್ರವರಿಗೂ ಮುನ್ನ 24 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಾಯ್ದೆ ಜಾರಿಯಾದ ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಇಳಿಕೆಯಾಗಿದೆ ಎಂದು ಸಿಎಂ ತಿಳಿಸಿದರು.


