2 ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರದಲ್ಲೇ ಬಿಡುಗಡೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡ್ತೀವಿ. ನಮ್ಮ ಗೃಹಲಕ್ಷ್ಮಿಯನ್ನು ಕಾಪಿ ಮಾಡಿಕೊಂಡು ಬಿಜೆಪಿ ಅವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕವನ್ನು ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.
ಸಂಪುಟ ಪುನರ್ ರಚನೆಯಲ್ಲಿ ಖಾತೆ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಬಹಳ ಸಂತೋಷದಿಂದ ಈ ಖಾತೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರ. ನಮಗೆ ಬೇರೆ ಖಾತೆ ಕೊಡಿ, ನಾವು ಮಂತ್ರಿ ಆಗಿರಬೇಕು ಅನ್ನೋದೆಲ್ಲ ನಾವು ಮಾತಾಡಬಾರದು. ಸಾಮಾನ್ಯ ಕಾರ್ಯಕರ್ತೆಯಾಗಿ ಬಂದಿದ್ದೇನೆ, ನಮ್ಮ ಹೈಕಮಾಂಡ್ ತೀರ್ಮಾನವೇ ನಮ್ಮ ತೀರ್ಮಾನ. ನಾನು ಯಾವಾಗಲೂ ಇದೇ ಮಾತನ್ನು ಹೇಳುತ್ತೇನೆ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತೆ. ಪಕ್ಷ ಏನ್ ಹೇಳುತ್ತೋ, ಶಿಸ್ತಿನ ಸಿಪಾಯಿಗಳಾಗಿ ಕೇಳ್ತಿವಿ. ಅವರು ಇವತ್ತು ಆಗ್ತಾರೋ, ನಾಳೆ ಆಗ್ತಾರೋ ಅವೆಲ್ಲಾ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.
ಗ್ಯಾರಂಟಿ ಲಾಭ ಪಡೆದ ಮಹಿಳೆಯರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿಲ್ಲ ಎಂಬ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿ, ರಾಜಣ್ಣ ಸರ್ ಯಾವ ಅರ್ಥದಲ್ಲಿ ಮಾತನಾಡಿದ್ದಾರೆಯೋ ಬಹುಶಃ ಅವರ ಕಡೆ ಕೇಳಿದರೆ ಸೂಕ್ತ ಉತ್ತರ ಸಿಗುತ್ತದೆ ಎಂದು ತಿಳಿಸಿದರು.



