ಬೆಳಗಾವಿಯಲ್ಲಿ ಫ್ಲೈಓವರ್ ನಿರ್ಮಾಣಕ್ಕೆ 270 ಕೋಟಿ ರೂ. ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಫ್ಲೈಓವರ್ ನಿರ್ಮಾಣಕ್ಕೆ ಈಗಾಗಲೇ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ 270 ಕೋಟಿ ರೂ. ಬಿಡುಗಡೆಗೊಳಿಸಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಟ್ರಾಫಿಕ್ ಕಂಟ್ರೋಲ್ ವಿಭಾಗ, ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಯೋಜನೆಯ ಅಂತಿಮ ಹಂತದ ರೂಪುರೇಷೆಗಳು, ಸಂಚಾರ ನಿರ್ವಹಣೆ ಮತ್ತು ತಾಂತ್ರಿಕ ಸವಾಲುಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಅತೀ ದೊಡ್ಡ ನಗರಗಳಲ್ಲಿ ಒಂದಾಗಿರುವ ಬೆಳಗಾವಿ ನಗರ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಸಂಚಾರ ದಟ್ಟಣೆ ಸೇರಿದಂತೆ ಹಲವು ಸಮಸ್ಯೆಗಳು ಎದುರಿಸುತ್ತಿದೆ. ಆದಕಾರಣ ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಆರಂಭಿಸುವ ಮುನ್ನ ಜಿಲ್ಲಾಧಿಕಾರಿಗಳಿಗೆ ಸಂಘ, ಸಂಸ್ಥೆಗಳು, ವಕೀಲರು, ಸಾರ್ವಜನಿಕರೊಂದಿಗೆ ಚರ್ಚಿಸಿ ಸಲಹೆ ಪಡೆಯಲು ತಿಳಿಸಿದ್ದಾಗಿ ಹೇಳಿದರು.
ಫ್ಲೈಓವರ್ ಕಾಮಗಾರಿಯನ್ನು ಮೂರು ಹಂತಗಳಲ್ಲಿ ಪೂರ್ಣಗೊಳಿಸುವ ಚರ್ಚೆ ನಡೆಸಿದ್ದೇವೆ. ಮೊದಲ ಹಂತದಲ್ಲಿ ರಾಣಿ ಚೆನ್ನಮ್ಮ ವೃತ್ತದಿಂದ ಕಾಮಗಾರಿ ಪ್ರಾರಂಭಿಸಿ ಪೂರ್ಣಗೊಳಿಸಿದ ಬಳಿಕ, ಮುಂದಿನ ಎರಡು ಹಂತಗಳಲ್ಲಿ ಕ್ರಮಬದ್ಧವಾಗಿ ಕಾಮಗಾರಿ ಕೈಗೊಳ್ಳುವ ಕುರಿತು ತಿಳಿಸಿದರು.
ಫ್ಲೈಓವರ್ ಕಾಮಗಾರಿ ನಿರ್ಮಾಣದ ಅವಧಿಯಲ್ಲಿ ವಾಹನ ಸವಾರರು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸುವುದು, ಇಲಾಖೆಗಳ ನಡುವೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುವುದು ಹಾಗೂ ಜನಸಾಮಾನ್ಯರಿಗೆ ಮತ್ತು ಆಡಳಿತ ವ್ಯವಸ್ಥೆಗೆ ಸಮಸ್ಯೆಯಾಗದಂತೆ ಯೋಜನೆಯನ್ನು ಸುಗಮವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಆಸೀಪ್ (ರಾಜು) ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ ಸೇರಿದಂತೆ ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.


