ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಳಗಾವಿ: ನಾವು ಎರಡು ಕಣ್ಣಲ್ಲಿ ನೂರು ಜನರನ್ನು ನೋಡಿದರೆ, ನೂರು ಜನರ ಇನ್ನೂರು ಕಣ್ಣುಗಳು ನಮ್ಮನ್ನು ಗಮನಿಸುತ್ತಿರುತ್ತವೆ. ಜನ ನಮ್ಮನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ. ಆದ್ದರಿಂದ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಪ್ರಾದೇಶಿಕ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನಸೇವೆಯಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
“ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ಮತ ಕೇಳಬೇಕು. ಆದರೆ ಅಧಿಕಾರಿಗಳಿಗೆ ಅಂತಹ ಅಗತ್ಯವಿಲ್ಲ. ಆದರೂ ಕರ್ತವ್ಯ ಮರೆತರೆ ಅದು ಜನತೆಗೆ ಮಾಡುವ ದ್ರೋಹವಾಗುತ್ತದೆ. ಅಧಿಕಾರಿಗಳು ತಮ್ಮ ಹೊಣೆಗಾರಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದರೆ ಸರ್ಕಾರದ ಮೇಲೆ ಜನರು ಇಟ್ಟಿರುವ ನಿರೀಕ್ಷೆ ಈಡೇರುತ್ತದೆ” ಎಂದರು.
ಸಭೆಯ ವೇಳೆ ಯಾವುದೇ ಅಧಿಕಾರಿ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದರೆ ಅಮಾನತು ಆದೇಶ ನೀಡಲಾಗುವುದು ಎಂದು ಎಚ್ಚರಿಸಿದ ಮುಖ್ಯಮಂತ್ರಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲೇ ನೆಲೆಸಬೇಕು ಎಂದು ಸೂಚಿಸಿದರು.
ಜನರನ್ನು ಸಣ್ಣಪುಟ್ಟ ಕೆಲಸಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ ಅವರು, ಜನರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ತಮ್ಮ ಅಧೀನದಲ್ಲಿರುವ ಅಧಿಕಾರಿಗಳ ಕಾರ್ಯಚಟುವಟಿಕೆಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ನಿತ್ಯದ ಮಾಹಿತಿ ಹೊಂದಿರಬೇಕು ಎಂದರು.


