ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಮತದಾರರ ಪಟ್ಟಿಯ ಅಕ್ರಮ ಆರೋಪ-ಆಯುಕ್ತರ ಪ್ರತಿಕೃತಿ ದಹಿಸಿ ಕಾರ್ಯಕರ್ತರ ಆಕ್ರೋಶ

ಬೆಳಗಾವಿ: ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಜಿಲ್ಲಾ ಹಾಗೂ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಬೆಳಗಾವಿಯ ಆರ್‌ಟಿಓ ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಕಾಂಗ್ರೆಸ್ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಘೋಷಣೆಗಳನ್ನು ಕೂಗುತ್ತಾ ಕೋರ್ಟ್ ವೃತ್ತದವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕ್ರಮಗಳನ್ನು ಖಂಡಿಸಿದರು. ಅವರು ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿಚಾರದಲ್ಲಿ ಹಲವು ಬಾರಿ ಸಲಹೆ ನೀಡಿದರೂ ಸಂವಿಧಾನಕ್ಕೆ ವಿರುದ್ಧವಾಗಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟುಮಾಡಲಾಗಿದೆ ಎಂದು ಆರೋಪಿಸಿದರು. ಅಸ್ಸಾಂ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಮರುಚುನಾವಣೆ ನಡೆಸಬೇಕು ಮತ್ತು ಕರ್ನಾಟಕದಲ್ಲಿ ಮರು ಎಸ್‌ಐಆರ್ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿದರು. ಆರ್‌ಬಿಐ ಅಧಿಕಾರಿಗಳ ಬದಲಾವಣೆ, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವರ್ಗಾವಣೆ ಹಾಗೂ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಎಂದು ದೂರಿದರು. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಸಂಬಂಧಪಟ್ಟ ಚುನಾವಣಾ ಆಯೋಗದ ಅಧಿಕಾರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮಹಿಳಾ ಕಾಂಗ್ರೆಸ್ ಮುಖಂಡರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿನ ಲೋಪಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಧೋರಣೆ ಬಿಜೆಪಿ ಪರವಾಗಿದೆ ಎಂದು ಅವರು ಆರೋಪಿಸಿದರು.
ಮತದಾನದ ಮೂಲಭೂತ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಪ್ರತಿಭಟನೆ ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದರು. ಬಿಜೆಪಿ ಮತ್ತು ಚುನಾವಣಾ ಆಯೋಗದ ನಿರ್ಧಾರಗಳು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿನ ಲೋಪಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನಬದ್ಧ ಮತದಾನದ ಹಕ್ಕನ್ನು ರಕ್ಷಿಸಲು ಇಂತಹ ಹೋರಾಟಗಳು ಅಗತ್ಯ ಎಂದು ಪ್ರತಿಪಾದಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ರಾಜಾ ಸಲೀಂ ಕಾಶಮ್ಮನವರ, ಗ್ರಾಮೀಣ ಅಧ್ಯಕ್ಷ ಬಸವರಾಜ್ ಶೇಗಾವಿ, ವಿವೇಕ ಜತ್ತಿ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.



