ಬಿಮ್ಸ್‌ನಲ್ಲಿ ಅವಧಿ ಮೀರಿದ ಲಸಿಕೆಗಳ ಸಂಗ್ರಹ ಪತ್ತೆ ಸಮಗ್ರ ವರದಿ ಸಲ್ಲಿಸಲು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸೂಚನೆ

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಈ ವೇಳೆ ಔಷಧ ಉಗ್ರಾಣದಲ್ಲಿ ರೇಬಿಸ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದ ಲಕ್ಷಾಂತರ ರೂಪಾಯಿ ಮೌಲ್ಯದ ಅವಧಿ ಮೀರಿದ ಲಸಿಕೆಗಳು ಪತ್ತೆಯಾಗಿದ್ದು, ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಮಗ್ರ ವರದಿ ಸಲ್ಲಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಮ್ಸ್‌ನ ನೋಂದಣಿ ಕೌಂಟರ್, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವೈದ್ಯಕೀಯ ಸಿಬ್ಬಂದಿಯ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದ ಉಪ ಲೋಕಾಯುಕ್ತರು, ಒಳರೋಗಿಗಳ ವಿಭಾಗ, ತೀವ್ರ ನಿಗಾ ಘಟಕ ಮತ್ತು ಪ್ರಸೂತಿ ವಿಭಾಗ ಸೇರಿದಂತೆ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳೊಂದಿಗೆ ಸಂವಾದ ನಡೆಸಿದ ಅವರು, ನೀಡಲಾಗುತ್ತಿರುವ ಚಿಕಿತ್ಸೆ ಮತ್ತು ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ರೋಗಿಗಳು ಪೌಷ್ಟಿಕ ಆಹಾರ ಸೇವಿಸುವಂತೆ ಸಲಹೆ ನೀಡಿದ ಅವರು, ಶೀಘ್ರ ಗುಣಮುಖರಾಗುವಂತೆ ಧೈರ್ಯ ತುಂಬಿದರು. ಇದೇ ಸಂದರ್ಭದಲ್ಲಿ ಗಾಯಗೊಂಡಿದ್ದ ರೋಗಿಯೊಬ್ಬರಿಗೆ ತ್ವರಿತವಾಗಿ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ಔಷಧ ವಿತರಣಾ ಕೇಂದ್ರಗಳ ಸಂಖ್ಯೆ ಹೆಚ್ಚಿಸಲು ಸೂಚನೆ: ಹೊರರೋಗಿಗಳ ನೋಂದಣಿ ವಿಭಾಗಕ್ಕೆ ಭೇಟಿ ನೀಡಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರು, ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿ, ರೋಗಿಗಳಿಂದ ಆಸ್ಪತ್ರೆಯ ಕಾರ್ಯವೈಖರಿ ಕುರಿತು ಮಾಹಿತಿ ಪಡೆದರು. ಬಳಿಕ ಹೊರರೋಗಿಗಳ ಔಷಧ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ರೋಗಿಗಳು ಔಷಧ ಪಡೆಯಲು ಅನಗತ್ಯವಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗದಂತೆ ಔಷಧ ವಿತರಣಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಸೂಚಿಸಿದರು. ಅಲ್ಲದೆ, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ರೋಗಿಗಳಿಂದ ಹಣ ಪಡೆಯದಂತೆ ನಿಗಾವಹಿಸಬೇಕು. ಆಸ್ಪತ್ರೆಯಲ್ಲಿ ಲಭ್ಯವಿರುವ ಔಷಧಿಗಳನ್ನು ಹೊರಗಿನಿಂದ ಖರೀದಿಸಿ ತರುವಂತೆ ರೋಗಿಗಳಿಗೆ ಸೂಚಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವಧಿ ಮೀರಿದ ಲಸಿಕೆಗಳ ಸಂಗ್ರಹಕ್ಕೆ ಅಸಮಾಧಾನ: ಬಿಮ್ಸ್‌ನ ಔಷಧ ಉಗ್ರಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೇಬಿಸ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದ ಲಕ್ಷಾಂತರ ರೂಪಾಯಿ ಮೌಲ್ಯದ ಅವಧಿ ಮೀರಿದ ಲಸಿಕೆಗಳು ಸಂಗ್ರಹವಾಗಿರುವುದು ಕಂಡುಬಂದಿತು. ಇದನ್ನು ಗಮನಿಸಿದ ಉಪ ಲೋಕಾಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಔಷಧ ಮತ್ತು ಲಸಿಕೆಗಳ ದಾಸ್ತಾನು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ನಡೆದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅವಧಿ ಮೀರಿದ ಲಸಿಕೆಗಳು ಉಗ್ರಾಣದಲ್ಲಿ ಉಳಿಯಲು ಕಾರಣವೇನು ಎಂಬುದರ ಕುರಿತು ಸಮಗ್ರ ವರದಿ ಸಲ್ಲಿಸಬೇಕು. ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವವರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರ ಆರೋಗ್ಯಕ್ಕೆ ಸಂಬಂಧಿಸಿದ ಔಷಧ ಮತ್ತು ಲಸಿಕೆಗಳ ದಾಸ್ತಾನು ಹಾಗೂ ವಿತರಣೆಯಲ್ಲಿ ಎಚ್ಚರಿಕೆ ವಹಿಸಬೇಕು. ಔಷಧಗಳ ಅವಧಿಯನ್ನು ನಿಯಮಿತವಾಗಿ ಪರಿಶೀಲಿಸಿ, ಅವಧಿ ಮೀರಿದ ಔಷಧಿಗಳು ಬಳಕೆಯಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ರಕ್ತ ಭಂಡಾರ ಪರಿಶೀಲನೆ: ನಂತರ ಬಿಮ್ಸ್‌ನ ರಕ್ತ ಭಂಡಾರಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತರು, ವಿವಿಧ ರಕ್ತದ ಗುಂಪುಗಳ ದಾಸ್ತಾನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಪನಿಬಂಧಕರಾದ ಅರವಿಂದ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ ದೇಸಾಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಬಿಮ್ಸ್ ನಿರ್ದೇಶಕ ವಿನಯ ದಾಸ್ತಿಕೊಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ. ಗಡಾದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



